ನಿರೀಕ್ಷೆ ಹುಟ್ಟಿಸಿರುವ ‘ಗರಡಿ’ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ.
ನಟ ಹಾಗೂ ಶಾಸಕ ಬಿ.ಸಿ.ಪಾಟೀಲ್ ಅವರ ಪತ್ನಿ ವನಜಾ ಪಾಟೀಲ್ ಹಾಗೂ ಪುತ್ರಿ ಸೃಷ್ಟಿ ಪಾಟೀಲ್ ನಿರ್ಮಾಣದ ‘ಗರಡಿ’ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದ್ದು ಜಿ.ವಿ.ಅಯ್ಯರ್ ಸ್ಟುಡಿಯೋದಲ್ಲಿ ಚಿತ್ರ ತಂಡ ಕುಂಬಳಕಾಯಿ ಹೊಡೆದಿದೆ.
ಸಿನಿಮಾದಲ್ಲಿ ಬಿ.ಸಿ.ಪಾಟೇಲ್ ಅವರು ಬಣ್ಣ ಹಚ್ಚಿದ್ದಾರೆ. ಇದರೊಂದಿಗೆ ಮತ್ತೊಂದು ವಿಶೇಷವೆಂದರೆ, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅವರು ನಾಯಕನ ತಂದೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಯಶಸ್ ಸೂರ್ಯ, ಸೋನಾಲ್ ಮೊಂತೆರೊ, ರವಿಶಂಕರ್, ಸುಜಯ್ ಬೇಲೂರು, ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಮುಂತಾದವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.
ನಿರ್ದೇಶಕ ಯೋಗರಾಜ್ ಭಟ್ ಮಾತಾನಾಡಿ, ನಿರ್ಮಾಪಕರಾದ ಬಿ.ಸಿ.ಪಾಟೀಲ್ ಅವರಿಗೆ ವಿಶೇಷ ಧನ್ಯವಾದ. “ಗರಡಿ” ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.


ನಿರ್ಮಾಪಕ ಬಿ.ಸಿ.ಪಾಟೀಲ್ ಮಾತಾನಾಡಿ, “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಚೆನ್ನಾಗಿ ಬಂದಿದೆ. ಚಿತ್ರದ ಆಡಿಯೋ ಹಕ್ಕು ಸರಿಗಮಪ ಸಂಸ್ಥೆಗೆ ಒಂದು ಕೋಟಿಗೆ ಮಾರಾಟವಾಗಿದೆ. ಡಬ್ಬಿಂಗ್, ರಿಮೇಕ್ ರೈಟ್ಸ್ ಗೂ ಸಾಕಷ್ಟು ಬೇಡಿಕೆ ಇದೆ. ನಮ್ಮ ಸಂಸ್ಥೆಯ ನಿರ್ಮಾಣದ ಹದಿನಾರನೇ ಚಿತ್ರ. ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಚಿತ್ರ ತೆರೆಗೆ ಬರಲಿದೆ ಎಂದರು.
ನಾನು ಪೈಲ್ವಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಅನುಭವಿ ಕಲಾವಿದರೊಂದಿಗೆ ನಟಿಸಿರುವ ಖುಷಿಯಿದೆ. ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ವಂದನೆಗಳು ಎಂದರು ನಾಯಕ ಯಶಸ್ ಸೂರ್ಯ.
ನಾಯಕಿ ಸೋನಾಲ್ ಮೊಂತೆರೊ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು.
ನಟ “ಆರ್ಮುಗಂ” ರವಿಶಂಕರ್ ಮಾತನಾಡಿ, ಈ ಚಿತ್ರದಲ್ಲಿ ಅಭಿನಯಿಸಿರುವುದು ಖುಷಿಯಾಗಿದೆ. ಯೋಗರಾಜ್ ಭಟ್ ಹಾಗೂ ಬಿ.ಸಿ.ಪಾಟೀಲ್ ಅವರ ಜೊತೆ ಇದು ನನ್ನ ಮೊದಲ ಚಿತ್ರ ಎಂದರು.
ನಟ ಸುಜಯ್ ಬೇಲೂರ್ ಸಹ ತಮ್ಮ ಪಾತ್ರ ಪರಿಚಯ ಮಾಡಿಕೊಂಡರು. ಕಲಾವಿದರಾದ ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಹಾಗೂ ಕಥೆ ಬರೆದಿರುವ ವಿಕಾಸ್ “ಗರಡಿ” ಚಿತ್ರದ ಕುರಿತು ಮಾತನಾಡಿದರು.
ನಿರ್ಮಪಕಿ ಸೃಷ್ಟಿ ಪಾಟೀಲ್ ಚಿತ್ರೀಕರಣ ಸರಾಗವಾಗಿ ಮುಗಿಯಲು ಸಹಕಾರ ನೀಡಿದ್ದ ಸಮಸ್ತ ತಂಡಕ್ಕೂ ಧನ್ಯವಾದ ತಿಳಿಸಿದರು.
ಚಿತ್ರದ ವಿಶೇಷಪಾತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಭಿನಯಿಸಿದ್ದಾರೆ. ನಿರ್ಮಾಪಕ ಬಿ.ಸಿ.ಪಾಟೀಲ್, ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಾಯಕ ಯಶಸ್ ಸೂರ್ಯ ಸೇರಿದಂತೆ ಚಿತ್ರತಂಡದ ಸದಸ್ಯರು ದರ್ಶನ್ ಅವರಿಗೆ ಧನ್ಯವಾದ ತಿಳಿಸಿದರು.

